ಮಂಗಳೂರು: ವಕೀಲ ರಾಜೇಶ್ ಲೈಂಗಿಕ ದೌರ್ಜನ್ಯ ಪ್ರಕರಣ- ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆ

ನ್ಯಾಯವಾದಿ ರಾಜೇಶ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ
ಪ್ರಕರಣದ ವಿಚಾರಣೆ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆ

 

ಮಂಗಳೂರು: ನಗರದ ವಕೀಲ ಕೆ.ಎಸ್.ಎನ್. ರಾಜೇಶ್ ವಿರುದ್ಧ ಈ ಹಿಂದೆ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಯನ್ನು ಮಂಗಳೂರಿನ 3ನೇ ಜೆಎಂಎಫ್‌ಸಿ ನ್ಯಾಯಾಲಯವು ದ.ಕ. ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆಗೊಳಿಸಿ ಆದೇಶಿಸಿದೆ. 

ರಾಜೇಶ್ ತನ್ನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ನೀಡಿರುವುದರ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಎಸಿಪಿ ರಂಜಿತ್ ಕುಮಾರ್ ಭಂಡಾರು ಅವರು ಆರೋಪಿ ನ್ಯಾಯವಾದಿ ರಾಜೇಶ್ ಮತ್ತು ಆತ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಬೋಂದೆಲ್ ನಿವಾಸಿ ಅನಂತ್ ಭಟ್, ಬೆಂಗಳೂರಿನ ಆದಿತ್ಯ ಕೆ.ಬಿ. ಮತ್ತು ರಾಜೇಶ್‌ನ ಪತ್ನಿ ಶಶಿಕಲಾ ವಿರುದ್ಧ ಪ್ರಕರಣ ದಾಖಲಿಸಿದ್ದರಲ್ಲದೆ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 110 ಸಾಕ್ಷಿಗಳನ್ನು ವಿಚಾರಿಸಿ ಸಾಕ್ಷ್ಯಾಧಾರಗಳೊಂದಿಗೆ ದೋಷಾರೋಪಣಾ ಪಟ್ಟಿಯನ್ನು ಎಸಿಪಿ ದಿನಕರ್ ಶೆಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಆರೋಪಿ ರಾಜೇಶ್ ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿವಂತೆ ಉಚ್ಚನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ನಾಗಪ್ರಸನ್ನ ರಿಟ್ ಅರ್ಜಿಯನ್ನು ವಜಾಗೊಳಿಸಿ ಪ್ರಕರಣವು ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಬೇಕು ಎಂದು ಆದೇಶಿಸಿದ್ದರು.

ಇದೊಂದು ಘೋರ ಪ್ರಕರಣವಾಗಿದ್ದು ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಬೇಕಾದ ಕಾರಣ ಪ್ರಕರಣವನ್ನು ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆಗೊಳಿಸಿ ಮಂಗಳೂರಿನ 3ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ತಾರಾ ಆದೇಶಿಸಿದ್ದಾರೆ.