ಉಡುಪಿ: ಫ್ಲೈಓವರ್‌ನಿಂದ ಸರ್ವಿಸ್ ರಸ್ತೆಗೆ ಉರುಳಿ ಬಿದ್ದ ಕಾರು: ಓರ್ವ ಮೃತ್ಯು, ಇಬ್ಬರು ಗಂಭೀರ

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ಹಿಂತಿರುಗುತ್ತಿದ್ದ ಮೂವರು
ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋ ಎದುರುಗಡೆ ನಡೆದ ಘಟನೆ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋ ಎದುರುಗಡೆ ಸಂಭವಿಸಿದೆ. 

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ಕೇರಳದ ಪಾಂಡಿಚೇರಿಗೆ ಹಿಂತಿರುಗುತ್ತಿದ್ದ ಮೂವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಕುಂದಾಪುರ-ಉಡುಪಿ ನಡುವಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರ ಸಮೀಪದ ಕೆಎಸ್‌ಆರ್‌ಟಿಸಿ ಡಿಪೋ ಎದುರಿಗೆ ಫ್ಲೈಓವರ್‌ ಮೇಲೆ ಚಲಿಸುತ್ತಿದ್ದ ಕಾರು ಏಕಾಏಕಿ ಸರ್ವಿಸ್ ರಸ್ತೆ ಮತ್ತು ಹೆದ್ದಾರಿ ನಡುವಿನ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. 

ಅಪಘಾತದ ತೀವ್ರತೆಗೆ ಢಿಕ್ಕಿ ಹೊಡೆದ ಕಾರು ಕಬ್ಬಿಣದ ಗ್ರಿಲ್‌ಗಳನ್ನು ಮುರಿದು ಸರ್ವಿಸ್ ರಸ್ತೆ ಮೇಲೆ ಬಿದ್ದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದ ಸಂದರ್ಭ ಸರ್ವಿಸ್ ರಸ್ತೆಯಲ್ಲಿ ಯಾವುದೇ ವಾಹನ ಸಂಚಾರ ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.