ಮಂಗಳೂರು: ವಿ.ವಿ ಹಾಸ್ಟೆಲ್‌ನಲ್ಲಿ ಆಹಾರದ ಗುಣಮಟ್ಟಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ.!!

ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬುಧವಾರ ರಾತ್ರಿ ಉಪಕುಲಪತಿಗಳ ನಿವಾಸದ ಎದುರು ಪ್ರತಿಭಟನೆ ನಡೆಸಿದರು.

ವಿಸಿ ನಿವಾಸದ ಮುಂದೆ ಹಳಸಿದ ಅಕ್ಕಿ ಇರುವ ಪಾತ್ರೆಗಳನ್ನು ಇಟ್ಟು ಪ್ರತಿಭಟನೆ ನಡೆಸಿದರು.ಕೆಲ ಸಮಯದಿಂದ ಆಹಾರದ ಗುಣಮಟ್ಟ ಕಳಪೆಯಾಗಿದ್ದು, ಅಡುಗೆ ಸಿಬ್ಬಂದಿ ಸ್ಪಂದಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಬೆಂಗಳೂರಿಗೆ ಬಂದಿದ್ದ ವಿಸಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇನ್ನಾದರೂ ವಿಸಿ ಸ್ಥಳಕ್ಕೆ ಭೇಟಿ ನೀಡುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು. ನಂತರ ಕುಲಸಚಿವ ರಾಜು ಮೊಗವೀರ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದರಾದರೂ ತಡರಾತ್ರಿವರೆಗೂ ಪ್ರತಿಭಟನೆ ಮುಂದುವರಿಯಿತು.ಕೊಣಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದರು.