ಬದಲಾದ ಸರಕಾರ : ಪ್ರವೀಣ್ ನೆಟ್ಟಾರು ಪತ್ನಿಗೆ ಉದ್ಯೋಗದಿಂದ ಮುಕ್ತಿ.!
ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯವರಿಗೆ ಉದ್ಯೋಗದಿಂದ ಬಿಡುಗಡೆ

ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಕೆಲಸದಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.

ಕಳೆದ ಜುಲೈ 26ರಂದು ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದರು. ಈ ಹಿಂದೆ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭರವಸೆ ನೀಡಿದ್ದರು.

ಅದರಂತೆ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ 2022ರ ಸೆಪ್ಟೆಂಬರ್ 22ರಂದು ಆದೇಶ ಹೊರಡಿಸಲಾಗಿತ್ತು. ನೂತನ ಕುಮಾರಿ ಅವರ ವಿನಂತಿ ಮೇರೆಗೆ ಅವರಿಗೆ ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಕೆಲಸ ನೀಡಲಾಗಿತ್ತು. ಕಳೆದ ಅಕ್ಟೋಬರ್ 14ರಂದು ಅವರು ಕರ್ತವ್ಯಕ್ಕೆ ಹಾಜರಾಗಿದ್ದರು.

ಪ್ರಸಕ್ತ ಮುಖ್ಯಮಂತ್ರಿ ಇರುವ ತನಕ ಇಲ್ಲವೇ ಮುಂದಿನ ಆದೇಶದವರೆಗೆ ಎಂದು ಅವರ ನೇಮಕಾತಿ ಆದೇಶದಲ್ಲಿ ನಮೂದಿಸಲಾಗಿತ್ತು ಎನ್ನಲಾಗಿದೆ. ಇದೀಗ ಸರಕಾರ ಬದಲಾಗಿದ್ದು, ನೂತನ ಕುಮಾರಿ ಅವರನ್ನು ಕೆಲಸದಿಂದ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿದುಬಂದಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!