ಸುರತ್ಕಲ್‌: ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ - ಸಲಿಂಗಕಾಮಿ ಉಪನ್ಯಾಸಕನಿಗೆ ಜೀವಾವಧಿ ಶಿಕ್ಷೆ
ಅನೈಸರ್ಗಿಕ ಲೈಂಗಿಕ ಕ್ರಿಯೆ : ಪೃಥ್ವಿರಾಜ್‌ಗೆ ಜೀವಾವಧಿ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯೊಂದಿಗೆ ಅನೈಸರ್ಗಿಕ ರೀತಿಯಲ್ಲಿ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ ಅಪರಾಧಿ ಉಪನ್ಯಾಸಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ ಟಿಎಸ್‌ಸಿ-1) ಜೀವಾವಧಿ ಶಿಕ್ಷೆ ವಿಧಿಸಿದೆ.

ಶಿಕ್ಷೆಗೊಳಗಾದ ವ್ಯಕ್ತಿಯನ್ನು ಕುಳಾಯಿಯ ಪೃಥ್ವಿರಾಜ್‌ (33) ಎನ್ನಲಾಗಿದೆ. ಈತ ಎಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವನಿಗೆ 2014ರ ಆ. 1ರಿಂದ 2016ರ ಸೆ. 2ರ ವರೆಗೆ ಅನೈಸರ್ಗಿಕ ರೀತಿಯ ಲೈಂಗಿಕ ಕ್ರಿಯೆ ಮೂಲಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಸುರತ್ಕಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಪರಾಧಿ ಪೃಥ್ವಿರಾಜ್‌ ವಿದ್ಯಾರ್ಥಿಯನ್ನು ತನ್ನ ಮನೆಗೆ ಕರೆಸಿ ನಿರಂತರವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದ. ಯಾರಿಗಾದರೂ ಹೇಳಿದರೆ ಬಿಡುವುದಿಲ್ಲ, ಪರೀಕ್ಷೆಯಲ್ಲಿ ಅಂಕ ಕಡಿತ ಮಾಡುತ್ತೇನೆ. ಹಾಜರಾತಿ ಕಡಿತ ಮಾಡುತ್ತೇನೆ ಎಂದು ಹೆದರಿಸಿದ್ದ. ಬಾಲಕನ ಜನನಾಂಗದಲ್ಲಿ ಹುಣ್ಣಾಗಿ ಗಾಯವಾಗಿ ವೈದ್ಯರಲ್ಲಿ ತಪಾಸಣೆ ನಡೆಸಿ ಚಿಕಿತ್ಸೆ ಪಡೆಯುವ ವೇಳೆ ಬಾಲಕ ತನ್ನ ಮೇಲೆ ನಡೆಯುತ್ತಿದ್ದ ದೌರ್ಜನ್ಯವನ್ನು ಮನೆಯವರು ಮತ್ತು ವೈದ್ಯರಿಗೆ ತಿಳಿಸಿದ್ದ. ಸುರತ್ಕಲ್‌ ಇನ್‌ಸ್ಪೆಕ್ಟರ್‌ ಆಗಿದ್ದ ಚೆಲುವರಾಜ್‌ ಬಿ. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಆರೋಪಿಯ ಅಪರಾಧ ದೃಢಪಟ್ಟಿರುವುದರಿಂದ ಆರೋಪಿ ತಪ್ಪಿತಸ್ಥನೆಂದು ತೀರ್ಪು ನೀಡಿ ಬುಧವಾರದಂದು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಅಲ್ಲದೆ ಸಂತ್ರಸ್ತ ಬಾಲಕನಿಗೆ ರಾಜ್ಯ ಸರಕಾರ 1 ಲ.ರೂ. ಪರಿಹಾರ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಸರಕಾರದ ಪರ ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ಅವರು ವಾದಿಸಿದ್ದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!