"ನೋಡೇ ಬಿಡೋಣ ಬಡವರ ರಕ್ಷಣೆಗಾಗಿ ಜೈಲಿಗೆ ಹೋಗಲು ಸಿದ್ಧ" ಹರೀಶ್ ಪೂಂಜಾ ದಿಟ್ಟ ನಿರ್ಧಾರ
ಎಫ್​ಐಆರ್ ದಾಖಲಾಗಿದ್ದಕ್ಕೆ ಹರೀಶ್ ಪೂಂಜಾ ಮೊದಲ ಪ್ರತಿಕ್ರಿಯೆ

ಮಂಗಳೂರು: ಅರಣ್ಯಾಧಿಕಾರಿ ನೀಡಿದ ದೂರಿನ ಮೇರೆಗೆ ಹರೀಶ್ ಪೂಂಜಾ ಮೇಲೆ ಎಫ್‍ಐಆರ್ ದಾಖಲಾಗಿದ್ದು, ಇದೀಗ ಶಾಸಕರು ಬಂಧನದ ಭೀತಿಯಲ್ಲಿದ್ದಾರೆ. ಈ ಬೆನ್ನಲ್ಲೇ ಶಾಸಕರು ಫೇಸ್‍ಬುಕ್‍ನಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಬಡವರ ರಕ್ಷಣೆಗಾಗಿ ಜೈಲಿಗೆ ಹೋಗಲು ಸಿದ್ಧ ಎಂದು ತಿಳಿಸಿದ್ದಾರೆ.

ನಾನು ಜನರಿಂದ ಶಾಸಕನಾಗಿ ಜನರಿಗೋಸ್ಕರ ಇರುವವನು ಅದಕ್ಕಾಗಿ ಯಾವ ಬೆಲೆ ತೆರಲು ಸಿದ್ಧ. ಬಡವರಿಗಾಗಿ ಇಂತಹ ನೂರು ಕೇಸು ಹಾಕಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ, ಜೈಲು ಸೇರಲೂ ತಯಾರಿದ್ದೇನೆ ಎಂದು ಶಾಸಕರು ಹೇಳಿದ್ದಾರೆ.

ಪೋಸ್ಟ್ ನಲ್ಲಿ ಏನಿದೆ..?: ನೋಡೇ ಬಿಡೋಣ. ನಾನು ಶಾಸಕನಾಗಿರುವುದು ನನ್ನ ಜನರ ಸೇವೆಗೆ ಮತ್ತು ಅವರ ರಕ್ಷಣೆಗೆ ಜೈಲಿಗೆ ಹೋಗಲು ಸಿದ್ಧ. ಬಾಲ್ಯದಿಂದಲೂ ಸುಭಾಷ್ ಚಂದ್ರ ಬೋಸ್, ಸರ್ದಾರ್ ಪಟೇಲ್, ವೀರ ಸಾವರ್ಕರ್, ಭಗತ್ ಸಿಂಗ್ ಮುಂತಾದವರನ್ನು ಆದರ್ಶವಾಗಿ ಇಟ್ಟುಕೊಂಡು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ (ABVP) ದಿನಗಳಿಂದ ಜನ ಸೇವೆ, ಜನರಿಗಾಗಿ ಸಂಘರ್ಷ ಮಾಡಿಕೊಂಡು ನಾಯಕನಾದವನು. ನಾನು ಜನರಿಂದ ಶಾಸಕನಾಗಿ ಜನರಿಗೋಸ್ಕರ ಇರುವವನು ಅದಕ್ಕಾಗಿ ಯಾವ ಬೆಲೆ ತರಲು ಸಿದ್ಧ.

ನನ್ನ ವಿಧಾನಸಭಾ ಕ್ಷೇತ್ರದಲ್ಲಿ, ಅರಣ್ಯದ ಅಂಚಿನಲ್ಲಿ, ನೂರು ವರ್ಷಕ್ಕಿಂತಲೂ ಹಿಂದಿನಿಂದ ಕೃಷಿ ಚಟುವಟಿಕೆ ಮಾಡುತ್ತಾ ಬಂದಿದ್ದ ಕಳೆಂಜದ ಶ್ರೀ ದೇವಣ್ಣ ಗೌಡ ಅವರ ಕುಟುಂಬವನ್ನು ಒಕ್ಕಲೆಬ್ಬಿಸಲು ಯತ್ನಿಸಿದ ಅರಣ್ಯ ಇಲಾಖೆಯ ವಿರುದ್ಧ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಶಾಸಕ ಮಿತ್ರರೊಂದಿಗೆ ಮತ್ತು ಕಾರ್ಯಕರ್ತರೊಂದಿಗೆ ಸೇರಿ ಪ್ರತಿಭಟಿಸಿ ಬಡ ಕುಟುಂಬವನ್ನು ಒಕ್ಕಲೆಬ್ಬಿಸುವುದರಿಂದ ತಡೆದಿದ್ದೆವು.

ನೂರಾರು ವರ್ಷಗಳಿಂದ ಬದುಕು ಕಟ್ಟಿಕೊಂಡಿದ್ದ ಮನೆಯವರ ಪರವಾಗಿ ನಾನೊಬ್ಬ ಜನಪ್ರತಿನಿಧಿಯಾಗಿ ಧ್ವನಿ ಎತ್ತಿದ್ದು ತಪ್ಪಾಯಿತೇ? ನನ್ನ ಕ್ಷೇತ್ರದ ಜನರ ಪರವಾಗಿ ಹೋರಾಡುವ ಹಕ್ಕು ನನಗಿಲ್ಲವೇ? ನನ್ನ ಜನ ನನ್ನಲ್ಲಿ ಸಮಸ್ಯೆ ಹೇಳಿಕೊಂಡಾಗ ಸುಮ್ಮನಿರಬೇಕೆ? ಹೀಗಾದರೆ ಸಾಮಾನ್ಯ ಜನರ ಗತಿಯೇನು? ಜನರ ಸಮಸ್ಯೆಗೆ ಧ್ವನಿಯಾದ ಒಬ್ಬ ಜನಪ್ರತಿನಿಧಿಯನ್ನು ಹೀಗೆಲ್ಲ ಕಾಡುವುದಾದರೆ ಜನಸಾಮಾನ್ಯರು ಕಾಂಗ್ರೆಸ್ ಸರ್ಕಾರದಡಿಯಲ್ಲಿ ಹೇಗೆ ಬದುಕಬೇಕು? ಮಾನ್ಯ ಮುಖ್ಯಮಂತ್ರಿಗಳೇ, ಅರಣ್ಯ ಸಚಿವರೇ ನಿಮ್ಮ ಈ ಬೆದರಿಕೆ ತಂತ್ರಗಳಿಗೆ ನಾನು ಬೆದರುವುದಿಲ್ಲ. ಮತ್ತೆ ಹೇಳುತ್ತಿದ್ದೇನೆ ಬಡವರಿಗಾಗಿ ಇಂತಹ ನೂರು ಕೇಸು ಹಾಕಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ, ಜೈಲು ಸೇರಲೂ ತಯಾರಿದ್ದೇನೆ.

ಏನಿದು ಘಟನೆ..?: ಕೆಲ ದಿನಗಳ ಹಿಂದೆ ಅಂದರೆ ಅ. 8ರಂದು ಚಾರ್ಮಾಡಿ ಅರಣ್ಯದಲ್ಲಿ ಮನೆ ನಿರ್ಮಾಣ-ತೆರವು ಸಂಬಂಧ ಅರಣ್ಯಾಧಿಕಾರಿಗಳು-ಶಾಸಕರ ನಡುವೆ ಭಾರೀ ಜಟಾಪಟಿ ನಡೆದಿತ್ತು. ಈ ವೇಳೆ ಅರಣ್ಯಾಧಿಕಾರಿ ಜಯಪ್ರಕಾಶ್ ಗೆ ‘ಲೋಫರ್ ನನ್ ಮಗ’ ಅಂತಾ ಶಾಸಕರು ಬೈದಿದ್ದಾರೆ. ಇದರಿಂದ ಬೇಸರಗೊಂಡ ಅರಣ್ಯಾಧಿಕಾರಿ ಶಾಸಕ ಹಾಗೂ ಬೆಂಬಲಿಗರ ವಿರುದ್ಧ ದೂರು ದಾಖಲಿಸಿದ್ದಾರೆ. ಐಪಿಸಿ 1860(ಯು/ಎಸ್-143, 353, 504, 149) ಅಡಿ ಪ್ರಕರಣ ದಾಖಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!