ಸೌದಿ ಅರೇಬಿಯಾದಲ್ಲಿ ಬಂಧಿಯಾಗಿದ್ದ ಕಡಬದ ಯುವಕನಿಗೆ ರೀಲಿಫ್.!!
ಹ್ಯಾಕರ್‌ಗಳ ಸುಳಿಗೆ ಸಿಲುಕಿ ಬಂಧಿಯಾಗಿದ್ದ ಕಡಬದ ಯುವಕ ಬಂಧಮುಕ್ತ - ಇಂದು ಸ್ವದೇಶಕ್ಕೆ ಆಗಮನ

ಸೌದಿ ಅರೇಬಿಯಾದ ರಿಯಾದ್‌ನ ಜೈಲಿನಲ್ಲಿ ಕಳೆದ 11 ತಿಂಗಳಿನಿಂದ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪಕ್ಕೆ ಒಳಗಾಗಿ ಬಂಧಿಯಾಗಿದ್ದ ಕಡಬದ ಯುವಕ ಚಂದ್ರಶೇಖರ್‌ ಬಂಧಮುಕ್ತನಾಗಿದ್ದು, ಇಂದು ಸ್ವದೇಶಕ್ಕೆ ಆಗಮಿಸಲಿದ್ದಾರೆ.

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಶೇಖರ್‌ ಕೆಲಸದಲ್ಲಿ ಪದೋನ್ನತಿ ಪಡೆದು ಸೌದಿ ಅರೇಬಿಯಾಕ್ಕೆ 2022ರಲ್ಲಿ ತೆರಳಿದ್ದರು. ಅಲ್ಲಿ 2022ರ ನವೆಂಬರ್‌ನಲ್ಲಿ ಮೊಬೈಲ್‌ ಮತ್ತು ಸಿಮ್‌ ಖರೀದಿಗೆ ಅಂಗಡಿಗೆ ಭೇಟಿ ನೀಡಿದ್ದು ಅರ್ಜಿಯೊಂದಕ್ಕೆ ಎರಡು ಬಾರಿ ಹೆಬ್ಬೆಟ್ಟು (ತಂಬ್‌) ಸಹಿ ನೀಡಿದ್ದರು. ವಾರದ ಬಳಿಕ ಅವರಿಗೆ ಅರೇಬಿಕ್‌ ಭಾಷೆಯಲ್ಲಿ ಹೊಸ ದೂರವಾಣಿ ಸಂಖ್ಯೆಗೆ ಸಂದೇಶ ಬಂದಿತ್ತು. ಅದನ್ನು ತೆರೆದು ಚಂದ್ರಶೇಖರ್‌ ನೋಡಿದ್ದರು. 2 ದಿನಗಳ ನಂತರ ದೂರವಾಣಿ ಕರೆ ಬಂದು ಸಿಮ್‌ನ ಬಗ್ಗೆ ಮಾಹಿತಿ ಕೇಳಲಾಗಿತ್ತು. ಒಟಿಪಿ ತಿಳಿಸಿದ್ದರು. ವಾರದ ಬಳಿಕ ಅಲ್ಲಿನ ಪೊಲೀಸರು ಬಂದು ಚಂದ್ರಶೇಖರ್‌ ಅವರನ್ನು ಬಂಧಿಸಿದ್ದರು.

ಚಂದ್ರಶೇಖರ್‌ ಅವರನ್ನು ಬಂಧಿಸಲು ಕಾರಣ ಏನೆಂದರೆ ಅವರಿಗೆ ತಿಳಿಯದಂತೆ ಅಲ್ಲಿನ ಬ್ಯಾಂಕೊಂದರಲ್ಲಿ ಅವರದೇ ಹೆಸರಿನಲ್ಲಿ ಹ್ಯಾಕರ್‌ಗಳು ಖಾತೆ ತೆರೆದಿದ್ದರು. ಅಲ್ಲಿನ ಮಹಿಳೆಯೊಬ್ಬರ ಖಾತೆಯಿಂದ ಚಂದ್ರಶೇಖರ್‌ ಖಾತೆಗೆ 22 ಸಾವಿರ ರಿಯಲ್‌ ಜಮೆಯಾಗಿ, ಅದರಿಂದ ಕೂಡಲೇ ಬೇರೆ ಯಾವುದೋ ದೇಶಕ್ಕೆ ಆ ಹಣ ವರ್ಗಾವಣೆಯಾಗಿತ್ತು. ಇನ್ನು ಹಣ ಕಳೆದುಕೊಂಡ ಮಹಿಳೆಯು ಚಂದ್ರಶೇಖರ್‌ ಅವರ ಖಾತೆಗೆ ಹಣ ಜಮೆಯಾಗಿರುವುದನ್ನು ಗಮನಿಸಿ ಪೊಲೀಸರಿಗೆ ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ಬಂಧನವಾಗಿರುವ ಬಗ್ಗೆ ಚಂದ್ರಶೇಖರ್‌ ಅವರ ಗೆಳೆಯರು ಮನೆಯವರಿಗೆ ತಿಳಿಸಿದ್ದರು. ಜೈಲಿನಲ್ಲಿ ಇರುವ ವೇಳೆ ದಿನದಲ್ಲಿ ಕೇವಲ 2 ನಿಮಿಷ ಮಾತ್ರ ದೂರವಾಣಿ ಕರೆ ಮಾಡಲು ಚಂದ್ರಶೇಖರ್‌ ಅವರಿಗೆ ಅವಕಾಶ ನೀಡಲಾಗಿತ್ತು. ಅಲ್ಲಿನ ಸ್ನೇಹಿತರಿಗೂ ಅವರನ್ನು ಭೇಟಿಯಾಗಲು ಅವಕಾಶವಿರಲಿಲ್ಲ. ಇದೀಗ ಚಂದ್ರಶೇಖರ್‌ ಅವರು ನಿರಪರಾಧಿ ಎಂದು ತಿಳಿದು ಬಂಧಮುಕ್ತ ಮಾಡಲಾಗಿದೆ.

ಚಂದ್ರಶೇಖರ್‌ ಅವರನ್ನು ಸೌದಿ ಅರೇಬಿಯಾದ ರಿಯಾದ್‌ನಿಂದ ಅಲ್ಲಿನ ಪೊಲೀಸರು ವಿಮಾನದಲ್ಲಿ ಮುಂಬಯಿಗೆ ಕಳುಹಿಸಿಕೊಡಲಿದ್ದು, ಅಲ್ಲಿಂದ ಅವರು ಸಂಜೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ ಎಂದು ತಿಳಿದು ಬಂದಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!