'ಮಂಗಳೂರಿಗೆ ಪ್ರಧಾನಿ' - ಏ.14ರಂದು ಕರಾವಳಿಯಲ್ಲಿ ಮೋದಿ ಅಬ್ಬರ
ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ - ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗಿ

ಬಿಸಿಲಿನ ಬೇಗೆಯ ಜತೆಗೆ ಲೋಕಸಭಾ ಚುನಾವಣೆಯ ಕಾವು ದಿನೇ ದಿನೇ ಏರಲಾರಂಭಿಸಿದ್ದು ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.

ದ.ಕ ಜಿಲ್ಲೆಗೆ ಹಿಂದಿನ ಬಾರಿ ಮೋದಿ ಅವರು ಭೇಟಿ ನೀಡಿದಾಗ ಸೇರಿದ ಜನತೆಯ ದಾಖಲೆ ಮೀರಿಸುವಂತೆ ಈ ಬಾರಿ ಜನರು ಸಮಾವೇಶಗೊಳ್ಳಲಿದ್ದಾರೆ. ಪ್ರಧಾನಿ ಭೇಟಿಯಿಂದ ಕಾರ್ಯಕರ್ತರ ಉತ್ಸಾಹ ಇಮ್ಮಡಿಯಾಗಲಿದೆ. ಅನಂತರ ಮೂರು ದಿನಗಳ ಕಾಲ ಅಂದರೆ ಏ.15,16, 17ರಂದು ಪಕ್ಷದ ರಾಜ್ಯಾಧ್ಯಕ್ಷರಿಂದ ತೊಡಗಿ ಎಲ್ಲ ಪ್ರಮುಖರು, ಅಭ್ಯರ್ಥಿಗಳು, ಕಾರ್ಯಕರ್ತರು ಮನೆ ಮನೆ ಸಂಪರ್ಕ ಹಾಗೂ ಪ್ರಚಾರ ನಡೆಸಲಿದ್ದಾರೆ ಎಂದು ಸುನಿಲ್ ಕುಮಾರ್ ಹೇಳಿದರು.

ಏ.10, 11ರಂದು ಪಕ್ಷವು ಬೂತ್ ಮಟ್ಟದ ಮಹಾ ಪ್ರಚಾರ ಅಭಿಯಾನ ಕೈಗೊಳ್ಳಲಿದ್ದು,, ರಾಜ್ಯದ 58 ಸಾವಿರ ಬೂತ್‌ಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ 15, 16, 17ರಂದು ಮನೆ ಮನೆ ಸಂಪರ್ಕ ಅಭಿಯಾನ ನಡೆಯುತ್ತದೆ. ಈ ಬಾರಿ ಸುರಕ್ಷಿತ ಭಾರತ, ಸಾಂಸ್ಕೃತಿಕ ಭಾರತ ಮತತ್ತು ವಿಕಸಿತ ಭಾರತ ಎಂಬ ಮೂರು ಪ್ರಮುಖ ವಿಚಾರಗಳನ್ನು ಇಟ್ಟುಕೊಂಡು ಜನರ ಬಳಿಗೆ ಹೋಗುತ್ತೇವೆ ಎಂದು ಸುನಿಲ್ ಕುಮಾರ್ ವಿವರಿಸಿದರು.

ಶೌಚಾಲಯ ನಿರ್ಮಾಣದಿಂದ ತೊಡಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವರೆಗೆ, ಮನೆ ಮನೆಗೆ ಎಲ್‌ಪಿಜಿ ಸಂಪರ್ಕದಿಂದ ಹಿಡಿದು ಚಂದ್ರಯಾನದ ತನಕ ಪ್ರಧಾನಿ ಮೋದಿ ಅವರ ಸರಕಾರ ಕೈಗೊಂಡ ಎಲ್ಲ ಅಭಿವೃದ್ಧಿ ಕಾರ್ಯಗಳ ಮಾಹಿತಿಯನ್ನು ಮನೆ ಮನೆಗೆ ತಲುಪಿಸುತ್ತೇವೆ. ಎಲ್ಲ ಹಂತಗಳಲ್ಲಿ ಮತದಾರಿಗೆ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತೇವೆ ಎಂದು ಸುನಿಲ್‌ ಕುಮಾರ್ ಹೇಳಿದರು

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ರಾಜ್ಯಕ್ಕೆ ಆಗಮಿಸಿ ಮೊದಲ ಹಂತದ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಇದೀಗ ಪ್ರಧಾನಿ ಮೋದಿ ಅವರ ಪ್ರವಾಸದ ಮೂಲಕ ಎರಡನೇ ಹಂತದ ಪ್ರಚಾರ ಅಭಿಯಾನ ದೊಡ್ಡ ಮಟ್ಟದಲ್ಲಿ ನಡೆಯಲಿದೆ. ಏ.14ರಂದು ಮಂಗಳೂರಿನ ಸಮಾವೇಶ ಮುಗಿದ ಬಳಿಕ ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಅವರು ಬೆಂಗಳೂರಿನಲ್ಲಿ ಬೃಹತ್ ರೋಡ್‌ಶೋ ನಡೆಸಲಿದ್ದಾರೆ.

 

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರು ಅಸಹಕಾರ ತೋರುತ್ತಿರುವುದರಿಂದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಸವಾಲು ಎದುರಾಗಿಲ್ಲವೇ ಎಂಬ ಪರ್ತಕರ್ತರ ಪ್ರಶ್ನೆಗೆ, ಹಾಗೇನೂ ಇಲ್ಲ, ಎಲ್ಲರನ್ನೂ ಒಗ್ಗೂಡಿಸಿಕೊಂಡು ಚುನಾವಣೆಗೆ ಹೋಗುತ್ತೇವೆ. ಕಾಗೇರಿಯವರ ನಾಮಪತ್ರ ಸಲ್ಲಿಕೆ ಸಂದರ್ಭ ನಾನೂ ಹಾಜರಿರುತ್ತೇನೆ ಎಂದು ಸುನಿಲ್ ಹೇಳಿದರು.

ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಸಂಜೆ ಬೆಂಗಳೂರಿನಲ್ಲಿ ರೋಡ್ ಶೋದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 6ರಿಂದ 7 ಗಂಟೆಯವರೆಗೆ ಹೆಬ್ಬಾಳ-ಬ್ಯಾಟರಾಯನಪುರದಲ್ಲಿ ರೋಡ್ ಶೋ ನಡೆಯಲಿದೆ.

ಕರ್ನಾಟಕದ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಜೊತೆ ಕಳೆದ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದ ಪ್ರಧಾನಿ ಮೋದಿ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದ ಸಲಹೆ ಸೂಚನೆಗಳನ್ನು ನೀಡಿದ್ದರು. ಬೂತ್ ಮಟ್ಟದಲ್ಲಿ ಚುನಾವಣಾ ಪ್ರಚಾರ ಯಾವ ರೀತಿಯಲ್ಲಿ ಸಾಗುತ್ತಿದೆ ಎಂಬುದನ್ನು ವಿಚಾರಿಸಿದ್ದರು. ಇದೀಗ ಖುದ್ದು ರಾಜ್ಯಕ್ಕೆ ಭೇಟಿ ನೀಡಿ ಪ್ರಚಾರ ಕಾರ್ಯಕ್ಕೆ ವೇಗ ನೀಡಲಿದ್ದಾರೆ.

ಏಪ್ರಿಲ್ 14ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ನರೇಂದ್ರ ಮೋದಿ, ಮೊದಲಿಗೆ ಮಧ್ಯಾಹ್ನ 3 ಗಂಟೆಗೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಪರ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳುವುದು ಎಂದು ಈ ಹಿಂದೆ ನಿಗದಿಯಾಗಿತ್ತು. ಸಮಾವೇಶ ಮುಗಿದ ನಂತರ ಬೆಂಗಳೂರಿಗೆ ಆಗಮಿಸಿ, ಸಂಜೆ ಶೋಭಾ ಕರಂದ್ಲಾಜೆ ಕ್ಷೇತ್ರವಾದ ಬೆಂಗಳೂರು ಉತ್ತರದಲ್ಲಿ ರೋಡ್ ಶೋ ನಡೆಸುವುದೆಂದು ನಿರ್ಧರಿಸಲಾಗಿತ್ತು. ಆದರೆ, ಇದೀಗ ಚಿಕ್ಕಬಳ್ಳಾಪುರದ ಬದಲು ಮಂಗಳೂರಿನಲ್ಲಿ ಕಾರ್ಯಕ್ರಮ ನಿಗದಿಯಾಗಿದೆ. ನಂತರ ಬೆಂಗಳೂರಿನಲ್ಲಿ ರೋಡ್​ ಶೋ ನಿಗದಿಯಂತೆಯೇ ನಡೆಯಲಿದೆ.

ಕೆಲವು ದಿನಗಳ ಹಿಂದಷ್ಟೇ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಭ್ಯರ್ಥಿ ಡಾ. ಸಿನ್ ಮಂಜುನಾಥ್ ಪರ ರೋಡ್ ಶೋ ನಡೆಸಿದ್ದರು. ಬೆಂಗಳೂರಿನಲ್ಲಿ ಪಕ್ಷದ ರಾಜ್ಯ ನಾಯಕರ ಜೊತೆ ಸಭೆ ನಡೆಸಿ, ರಾಜ್ಯದ ವಿವಿಧ ಕಡೆಗಳಲ್ಲಿ ಎದ್ದಿರುವ ಬಂಡಾಯವನ್ನು ಶಮನಗೊಳಿಸುವ ಕಾರ್ಯ ಮಾಡಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಪ್ರಚಾರದ ಅಖಾಡಕ್ಕೆ ಧುಮುಕುತ್ತಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!